ಚುನಾವಣಾ ಆಯೋಗಕ್ಕೆ ಸುಳ್ಳು ವಿವರ ನೀಡಿದ ಆರೋಪ; ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಬಿ. ರಮೇಶ್ ಬಂಡಿಸಿದ್ಧೇಗೌಡ ಅವರು ಆಸ್ತಿ ಮತ್ತು ಆರ್ಥಿಕ ಹೊಣೆಗಾರಿಕೆಗೆ ಸಂಬಂಧಿಸಿದ ಮಾಹಿತಿಗಳನ್ನು ಮರೆಮಾಚಿ ಸುಳ್ಳು ವಿವರಗಳನ್ನು ನೀಡಿದ್ದಾರೆಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಮೈಸೂರು ನಿವಾಸಿ ಹಾಗೂ ಸ್ಥಳೀಯ ಮತದಾರ ಎಂ.ಡಿ. ಆದಿಶ್ ಸಾಗರ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಭಾರತ ಚುನಾವಣಾ ಆಯೋಗ, ರಾ‍ಜ್ಯ ಮುಖ್ಯ ಚುನಾವಣಾಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಚುನಾವಣೆಗೆ ಸ್ಪರ್ಧಿಸುವವರ ಆಸ್ತಿ ಮತ್ತು ಹೊಣೆಗಾರಿಕೆಯ ಮಾಹಿತಿಗಳನ್ನು ಪಡೆದುಕೊಳ್ಳುವುದು, ಅದರಲ್ಲಿ ತಪ್ಪು ಕಂಡು ಬಂದಲ್ಲಿ ಸೂಕ್ತ ವೇದಿಕೆಯಲ್ಲಿ ಅದನ್ನು ಪ್ರಶ್ನಿಸುವುದಕ್ಕೆ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಸುಪ್ರಿಂಕೋರ್ಟ್, ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಿದರೂ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದರೂ ಯಾವುದೇ ಕ್ರಮ ಜರುಗಿಸಿಲ್ಲ. ಆದ್ದರಿಂದ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಆರೋಪವೇನು?
ಮೈಸೂರು ತಾಲೂಕಿನ ಬೋಗಾದಿ ಗ್ರಾಮದ ಸರ್ವೇ ಸಂಖ್ಯೆ 78/5 ಸೇರಿ ಕೆಲ ಸರ್ವೆ ನಂಬರ್ ಗಳಲ್ಲಿರುವ ಜಮೀನುಗಳ ಮಾಲೀಕತ್ವವನ್ನು ರಮೇಶ್ ಬಂಡಿಸಿದ್ದೇಗೌಡ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಮುಚ್ಚಿಟ್ಟಿದ್ದಾರೆ. ಅಲ್ಲದೆ, ಇನ್ನೂ ಕೆಲವು ತಪ್ಪು ಮಾಹಿತಿಗಳನ್ನು ಒದಗಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Related Articles

Comments (0)

Leave a Comment