ಬಿಜೆಪಿ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಜಾಹೀರಾತು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು
- by Jagan Ramesh
- November 4, 2026
- 10 Views
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘ಶೇ. 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ ಪತ್ರಿಕೆಗಳಲ್ಲಿ ನೀಡಿದ್ದ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದು ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
ಅರ್ಜಿ ಪುರಸ್ಕರಿಸಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶಿಸಿದೆ. ವಿಸ್ತೃತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.
ಇದೇ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು 2026 ಫೆಬ್ರವರಿ 17ರಂದು ಹೈಕೋರ್ಟ್ ರದ್ದುಪಡಿಸಿತ್ತು.
ಪ್ರಕರಣದ ಹಿನ್ನೆಲೆ:
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪತ್ರಿಕಾ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದಲ್ಲಿ ಕಾಂಗ್ರೆಸ್ ಪಕ್ಷ, ಅದರ ಕರ್ನಾಟಕ ಘಟಕ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕಾಂಗ್ರೆಸ್ ಪ್ರಕಟಿಸಿದ್ದ ಜಾಹೀರಾತುಗಳಲ್ಲಿ ಅಂದಿನ ಬಿಜೆಪಿ ಸರ್ಕಾರವನ್ನು ‘ಶೇ.40 ಪರ್ಸೆಂಟ್ ಕಮಿಷನ್ ಸರ್ಕಾರ’ ಎಂದು ಟೀಕಿಸಲಾಗಿತ್ತು. ಸಾರ್ವಜನಿಕ ಖರೀದಿ, ಕಾಮಗಾರಿಗಳ ಗುತ್ತಿಗೆ ಹಾಗೂ ಕೋವಿಡ್-19 ಸಂಬಂಧಿತ ಸಾಮಗ್ರಿಗಳ ಪೂರೈಕೆ ಇನ್ನಿತರ ಕೆಲಸಗಳಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಜತೆಗೆ, ಭ್ರಷ್ಟಾಚಾರದ ಮೂಲಕ ಕರ್ನಾಟಕದ ಜನರಿಂದ ಬಿಜೆಪಿ ಸರ್ಕಾರ 1,500 ಕೋಟಿ ರೂ. ಲೂಟಿ ಮಾಡಿದೆ ಎಂದು ಜಾಹೀರಾತುಗಳಲ್ಲಿ ಆರೋಪಿಸಲಾಗಿತ್ತು. ಸರ್ಕಾರಿ ಹುದ್ದೆಗಳನ್ನು ಪಡೆಯಲು ‘ಸ್ಕೋರ್ ಕಾರ್ಡ್’ ಮತ್ತು ‘ರೇಟ್ ಕಾರ್ಡ್’ ವ್ಯವಸ್ಥೆ ಜಾರಿಯಲ್ಲಿತ್ತು ಹಾಗೂ ನೇಮಕಾತಿಗಳಿಗಾಗಿ ಲಂಚ ನೀಡಬೇಕಾಗಿತ್ತು ಎಂಬ ಆರೋಪಗಳನ್ನೂ ಕಾಂಗ್ರೆಸ್ ಮಾಡಿತ್ತು. ಇದೇ ರೀತಿಯ ಆರೋಪಗಳನ್ನು ರಾಹುಲ್ ಗಾಂಧಿ ಸಾರ್ವಜನಿಕ ಭಾಷಣವೊಂದರಲ್ಲೂ ಮಾಡಿದ್ದರು ಎಂದು ಆರೋಪಿಸಿ 2023ರ ಮೇ ತಿಂಗಳಲ್ಲಿ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು. ಇದರ ಆಧಾರದಲ್ಲಿ ವಿಚಾರಣಾ ನ್ಯಾಯಾಲಯ ಕಾಂಗ್ರೆಸ್ ನಾಯಕರ ವಿರುದ್ಧ 2024ರಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು.
ಅರ್ಜಿದಾರರ ವಾದವೇನು?
ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಕೆಪಿಸಿಸಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಜಾಹೀರಾತುಗಳಲ್ಲಿ ಬಿಜೆಪಿ ರಾಜಕೀಯ ಪಕ್ಷದ ವಿರುದ್ಧ ಮಾನಹಾನಿಕರ ಆರೋಪಗಳನ್ನು ಮಾಡಿರಲಿಲ್ಲ, ಬದಲಿಗೆ ಅಂದಿನ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಚಿವ ಸಂಪುಟದ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಲಾಗಿತ್ತು. ಆರೋಪಿತ ಹೇಳಿಕೆಗಳಿಂದ ನೇರವಾಗಿ ಮಾನಹಾನಿಗೊಳಗಾದ ವ್ಯಕ್ತಿ ಅಥವಾ ಸಂಸ್ಥೆ ಬಿಜೆಪಿ ಅಲ್ಲ. ಆದ್ದರಿಂದ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಬಿಜೆಪಿಗೆ ಕಾನೂನುಬದ್ಧ ಅರ್ಹತೆ ಇಲ್ಲ ಎಂಬುದು ಅರ್ಜಿದಾರರ ವಾದವಾಗಿತ್ತು.
Related Articles
Thank you for your comment. It is awaiting moderation.


Comments (0)