ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ; ಆರೋಪಿ ವಿರುದ್ಧದ ಪ್ರಕರಣ‌ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಉದ್ದೇಶಪೂರ್ವಕವಾಗಿ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಿರುವುದು ಅಸಂಭವ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಆರೋಪ ಎದುರಿಸುತ್ತಿದ್ದ ಪ್ರತಿಭಟನಾಕಾರನ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿದೆ.

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಂಡ್ಯದ ಡಿ.ಎಸ್. ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ಪುರಸ್ಕರಿಸಿರುವ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಆರಂಭದಲ್ಲೇ ಹೇಳುವುದಾದರೆ, ಭಾರತೀಯ ಜನತಾ ಪಕ್ಷ ಎಂಬ ರಾಜಕೀಯ ಪಕ್ಷ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವುದು ಅತ್ಯಂತ ಊಹಿಸಲಸಾಧ್ಯವಾದ ಸಂಗತಿಯಾಗಿದೆ. ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಘೋಷಣೆಗಳನ್ನು ಕೂಗುವ ಭರದಲ್ಲಿ ‘ಮುರ್ದಾಬಾದ್’ ಎಂಬ ಪದದ ಬದಲಿಗೆ ತಪ್ಪಾಗಿ ‘ಜಿಂದಾಬಾದ್’ ಎಂಬ ಪದ ಬಳಕೆಯಾಗಿದೆ ಎಂಬ ಅರ್ಜಿದಾರರ ವಾದವನ್ನು ಪರಿಗಣಿಸಬೇಕಾಗಿದೆ‌ ಎಂದು ಹೇಳಿದೆ.

ಪ್ರಕರಣದ ದೂರುದಾರರು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ವಿಡಿಯೊ ತುಣುಕಿನ ಆಧಾರದಲ್ಲಿ ದೂರು ದಾಖಲಿಸಿದ್ದು, ಅದೂ ಘಟನೆ ನಡೆದ 2 ವರ್ಷಗಳ ಬಳಿಕ ದೂರು ನೀಡಲಾಗಿದೆ. ಜತೆಗೆ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಗುರುತನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗೆ ಸಾಧ್ಯವಾಗಿಲ್ಲ. ಆರೋಪಿತ ಘೋಷಣೆಯಿಂದ ಸಮಾಜದಲ್ಲಿ ಅಥವಾ ನಿರ್ದಿಷ್ಟ ಸಮುದಾಯದಲ್ಲಿ ಯಾವುದೇ ಅಶಾಂತಿ ಉಂಟಾಗಿದೆಯೇ ಎಂಬುದರ ಬಗ್ಗೆಯೂ ತನಿಖೆಯಿಂದ ಹೆಚ್ಚಿನ ಮಾಹಿತಿ ದೊರೆತಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505(1)(ಬಿ) ಅಡಿಯಲ್ಲಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ಅಗತ್ಯವಿರುವ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನೂ ಪರಿಶೀಲಿಸಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಅಗತ್ಯವಾದ ಅನುಮತಿ ಇಲ್ಲದಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧದ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡಿರುವುದನ್ನು ಗಮನಿಸಿದೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್, ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸುವುದು ಅನಗತ್ಯವಾಗಿದ್ದು, ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟು, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ಪ್ರಕರಣವೇನು?

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ಐಪಿಸಿ ಸೆಕ್ಷನ್ 153ಬಿ (ರಾಷ್ಟ್ರೀಯ ಏಕತೆಗೆ ಧಕ್ಕೆ ತರುವ ಆರೋಪಗಳು ಅಥವಾ ಹೇಳಿಕೆಗಳು) ಮತ್ತು ಸೆಕ್ಷನ್ 505(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2022ರ ಡಿಸೆಂಬರ್ 18ರಂದು ಬಿಜೆಪಿ ಬೆಂಬಲಿಗರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಲಾಗಿದೆ ಎಂದು ಕನ್ನಂಬಾಡಿ ಕುಮಾರ್ ಎಂಬುವವರು ದೂರು ನೀಡಿದ್ದರು. ಇದರ ಬೆನ್ನಲ್ಲೇ, ಪ್ರಕರಣದಲ್ಲಿ ಆರೋಪಿಯಾಗಿದ್ದ ಡಿ.ಎಸ್ ರವಿಕುಮಾರ್, ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರ ವಾದವೇನು?

ಆರೋಪಿತ ಘೋಷಣೆಯನ್ನು ಅರ್ಜಿದಾರರು ಉದ್ದೇಶಪೂರ್ವಕವಾಗಿ ಕೂಗಿಲ್ಲ. ಪ್ರತಿಭಟನೆಯ ಉತ್ಸಾಹದಲ್ಲಿ ತಪ್ಪಾಗಿ ಪದ ಬಳಕೆಯಾಗಿದೆ. ‘ಪಾಕಿಸ್ತಾನ್ ಮುರ್ದಾಬಾದ್’ ಎನ್ನುವ ಬದಲು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ತಪ್ಪಾಗಿ ಕೂಗಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವ ಉದ್ದೇಶ ಅರ್ಜಿದಾರರಿಗೆ ಇರಲಿಲ್ಲ. ಆದ್ದರಿಂದ, ಅವರ ವಿರುದ್ಧದ ಕ್ರಿಮಿನಲ್ ಪ್ರಕರಣ ಮುಂದುವರಿಸುವುದು ಸಮರ್ಥನೀಯವಲ್ಲ ಎಂದು ರವಿಕುಮಾರ್ ಪರ ವಕೀಲರು ವಾದಿಸಿದ್ದರು.

ಅರ್ಜಿಯನ್ನು ಆಕ್ಷೇಪಿಸಿದ್ದ ಪ್ರಾಸಿಕ್ಯೂಷನ್ ಪರ ವಕೀಲರು, ದೂರುದಾರರು ಪೊಲೀಸರಿಗೆ ನೀಡಿದ್ದ ವಿಡಿಯೊ ತುಣುಕಿನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವುದು ಸ್ಪಷ್ಟವಾಗಿ ದಾಖಲಾಗಿದೆ. 2022ರ ಡಿಸೆಂಬರ್ 18ರಂದು ಪಾಕಿಸ್ತಾನದ ವಿದೇಶಾಂಗ ಸಚಿವರು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಪ್ರತಿಯಾಗಿ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ರವಿಕುಮಾರ್ ಉದ್ದೇಶಪೂರ್ವಕವಾಗಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ. ಆದ್ದರಿಂದ, ಆರೋಪಿಯ ವಿರುದ್ಧ ವಿಚಾರಣೆ ಮುಂದುವರಿಸಬೇಕು ಎಂದು ಪ್ರತಿಪಾದಿಸಿದ್ದರು.

Related Articles

Comments (0)

Leave a Comment