ಕುಟುಂಬ ಕಲ್ಯಾಣ ಕೇಂದ್ರಗಳ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ರಾಜ್ಯದಲ್ಲಿ ದಶಕಗಳಿಂದ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು (ಯುಎಫ್‌ಡಬ್ಲ್ಯುಸಿ) ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಮೈಸೂರು ಮಕ್ಕಳ ಕೂಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ಮಹಿಳಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಎಸ್. ಪ್ರಿಯದರ್ಶಿನಿ ಸೇರಿ ರಾಜ್ಯದ ವಿವಿಧೆಡೆ ಸ್ವಯಂ ಸೇವಾ ಸಂಸ್ಥೆಗಳ ನಗರ ಕುಟುಂಬ ಕಲ್ಯಾಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 92 ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಕೇಂದ್ರ ಸರ್ಕಾರ 2012ರಲ್ಲಿ ಹೊರಡಿಸಿದ್ದ ಸುತ್ತೋಲೆ ಆಧರಿಸಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಪಡಿಸಿ 2026ರ ಜುಲೈ 29ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಅರ್ಜಿಯ ಮುಂದಿನ ವಿಚಾರಣೆವರೆಗೆ ತಡೆ ನೀಡಿತು.

ಜತೆಗೆ, ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ನಗರ ಕುಟುಂಬ ಕಲ್ಯಾಣ ಕೇಂದ್ರಗಳು ನಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

Related Articles

Comments (0)

Leave a Comment