ಎಚ್ಡಿಕೆ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪ; ಎಸ್ಐಟಿ ರಚನೆ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
- by Jagan Ramesh
- June 19, 2025
- 242 Views

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸುವ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರಿಂದ, ಜಮೀನು ಒತ್ತುವರಿ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸದ್ಯಕ್ಕೆ ನಿರಾಳರಾಗಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ 2025ರ ಜನವರಿ 28ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.
ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಎಸ್ಐಟಿ ರಚಿಸಿರುವ ಆದೇಶದ ನಂತರ ಔಪಚಾರಿಕವಾಗಿ ಯಾವುದೇ ರೀತಿಯ ಅಧಿಸೂಚನೆ ಪ್ರಕಟಿಸಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದ್ದರಿಂದ, ಎಸ್ಐಟಿ ರಚಿಸಿರುವ ಆದೇಶ ಮತ್ತು ಆನಂತರ ಕುಮಾರಸ್ವಾಮಿ ಅವರಿಗೆ ಜಾರಿ ಮಾಡಿರುವ ಸಮನ್ಸ್ಗೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿತಲ್ಲದೆ, ಅರ್ಜಿ ಸಂಬಂಧ ಕಂದಾಯ ಇಲಾಖೆ ಮತ್ತು ರಾಮನಗರ ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಎಚ್.ಡಿ. ಕುಮಾರಸ್ವಾಮಿ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಎಸ್ಐಟಿ ರಚಿಸಿದ ಬಳಿಕ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಅಧಿಸೂಚನೆಯ ಅನುಪಸ್ಥಿತಿಯಲ್ಲಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಇದು ಕಾನೂನುಬಾಹಿರ ಕ್ರಮವಾಗಿದೆ. ಆದ್ದರಿಂದ, ಎಸ್ಐಟಿ ಕೈಗೊಂಡಿರುವ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಬೇಕು. ಈ ಸಂಬಂಧ ಮೇ 29ರಂದು ನೀಡಿರುವ ಸಮನ್ಸ್ ರದ್ದುಪಡಿಸಬೇಕು ಎಂದು ಕೋರಿದರು.
ಪ್ರಕರಣವೇನು?
ರಾಮನಗರ ಜಿಲ್ಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತವರ ಸಂಬಂಧಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದಾರೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳುವಂತೆ 2020ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ನ್ಯಾಯಾಲಯದ ಆದೇಶ ಜಾರಿಯಾಗಿಲ್ಲ ಎಂದು ಆಕ್ಷೇಪಿಸಿ ಸರ್ಕಾರದ ವಿರುದ್ಧ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಪತ್ತೆ ಮಾಡಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಎಸ್ಐಟಿ ರಚನೆ ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ, ಸರ್ಕಾರದ ಆದೇಶ ರದ್ದುಗೊಳಿಸಬೇಕೆಂದು ಕೋರಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.
Comments (0)