ಮಹಿಳಾ ನೌಕರರಿಗೆ ಋತುಚಕ್ರದ ರಜೆ; ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರದ ಹೊರಡಿಸಿರುವ ಅಧಿಸೂಚನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ‌ ನ್ಯಾಯಪೀಠ, ಅರ್ಜಿದಾರರ ಕೋರಿಕೆಯಂತೆ ಕಾರ್ಮಿಕ ಇಲಾಖೆಯ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರವು ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಆದೇಶಿಸಿತು. ಜತೆಗೆ, ಅರ್ಜಿ ಸಂಬಂಧ ರಾಜ್ಯ ಕಾರ್ಮಿಕ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದ ನ್ಯಾಯಪೀಠ, ಚಳಿಗಾಲದ ರಜೆಯ ಬಳಿಕ ಅರ್ಜಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ವಾದವೇನು?
ಇದಕ್ಕೂ ಮುನ್ನ ಬೆಂಗಳೂರು ಹೋಟೆಲ್‌ಗಳ ಸಂಘದ ಪರ ವಕೀಲ ಬಿ.ಕೆ. ಪ್ರಶಾಂತ್‌ ವಾದ ಮಂಡಿಸಿ, ಕಾರ್ಮಿಕ ಇಲಾಖೆಯು 18ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡಲು ಕಡ್ಡಾಯಗೊಳಿಸಿದೆ. ಫ್ಯಾಕ್ಟರಿ ಕಾಯ್ದೆ, ಬೀಡಿ ಮತ್ತು ಸಿಗರೇಟು, ಪ್ಲಾಂಟೇಷನ್‌ ಕಾರ್ಮಿಕರು, ಅಂಗಡಿ ಮತ್ತು ವಾಣಿಜ್ಯ, ಮೋಟಾರ್‌ ಟ್ರಾನ್ಸ್‌ಪೋರ್ಟ್‌ ಸ್ಥಾಪನಾ ಕಾಯ್ದೆ ಅಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ರಾಜ್ಯ ಸರ್ಕಾರ ಕಾರ್ಯಕಾರಿ ಆದೇಶ ಮಾಡಿದೆ. ಮೇಲಿನ ಎಲ್ಲ ಕಾಯ್ದೆಗಳೂ ಸಮಗ್ರ ರಜೆ ನೀತಿಯನ್ನು ಹೊಂದಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮುಂದುವರಿದು, ಫ್ಯಾಕ್ಟರಿ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ (Earned Leave) ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಪ್ರಕಾರ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ಕಮರ್ಷಿಯಲ್‌ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜತೆಗೆ 12 ದಿನ ಅನಾರೋಗ್ಯ ರಜೆ (Sick Leave) ನೀಡುತ್ತಿವೆ, 12 ಸಾಂದರ್ಭಿಕ ರಜೆಗಳೂ (Casual Leave) ಇವೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ. ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುದನ್ನೂ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಆಕ್ಷೇಪಿಸಿದರು.

ಆಗ ನ್ಯಾಯಪೀಠ, ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರ ಸಂಬಂಧಿತ ಸಂಸ್ಥೆಗಳ ಜತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಲಾಗಿದೆಯೇ ಎಂದು ಪ್ರಶ್ನಿಸಿತು. ಅದಕ್ಕೆ ವಕೀಲ ಪ್ರಶಾಂತ್‌ ಅವರು ‘ಇಲ್ಲ’ ಎಂದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ಅರ್ಜಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಮನವಿ:
ಕಾರ್ಮಿಕರು ಅಥವಾ ನೌಕರರ ಆರೋಗ್ಯ, ಯೋಗಕ್ಷೇಮ, ಸುರಕ್ಷತೆ ಕೆಲಸದ ಅವಧಿ, ವಾರದ ರಜೆ, ಒಟ್ಟು ರಜೆ ದಿನಗಳು, ವೇತನ ಸಹಿತ ರಜೆ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಕಾಯ್ದೆ-ಕಾನೂನುಗಳಿದ್ದು, ಅದರಂತೆ ಉದ್ದಿಮೆ, ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಈಗ ಏಕಾಏಕಿ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನಸಹಿತ ಋತುಚಕ್ರ ರಜೆ ಸೌಲಭ್ಯ ಒದಗಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದ, ಉದ್ದಿಮೆಗಳ ಕಾರ್ಯನಿರ್ವಹಣೆಯಲ್ಲಿ ಅಡಚಣೆ ಆಗಲಿದ್ದು, ಆರ್ಥಿಕ ಹೊರೆ ಸಹ ಬೀಳಲಿದೆ. ಕಾಯ್ದೆಗೆ ತಿದ್ದುಪಡಿ ಇಲ್ಲದೆ, ಕಾರ್ಯಕಾರಿ ಆದೇಶದ ಮೂಲಕ ಇಂತಹ ಸೌಲಭ್ಯ ಜಾರಿಗೊಳಿಸಲು ಅವಕಾಶವಿಲ್ಲ. ಇದೊಂದು ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದ್ದು, ಸರ್ಕಾರದ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Related Articles

Comments (0)

Leave a Comment