ದೈವಗಳ ಅಪಹಾಸ್ಯ; ರಣವೀರ್ ಸಿಂಗ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ಅವಕಾಶ ನೀಡಿದೆ.

ಪ್ರಕರಣ ಸಂಬಂಧ ನಗರದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರಕರಣದ ಖಾಸಗಿ ದೂರುದಾರರಾದ ಪ್ರಶಾಂತ್‌ ಮೆಥಲ್‌ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಹೈಗ್ರೌಂಡ್ಸ್‌ ಠಾಣೆ ಪೊಲೀಸರ ಪರ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಕೆಗೆ ಇದೇ ಕೊನೆಯ ಅವಕಾಶ ನೀಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು. ಜತೆಗೆ, ರಣವೀರ್‌ ಸಿಂಗ್ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿ ಫೆಬ್ರವರಿ 24ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

Related Articles

Comments (0)

Leave a Comment