ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ; ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದರಿಂದ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ಹಾವೇರಿ ಸಿಇಎನ್ (ಸೈಬರ್‌, ಆರ್ಥಿಕ ಅಫರಾಧ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ.

ಮೃತ ರೈತನ ತಂದೆ ಮತ್ತು ಪೊಲೀಸರು ಸ್ಪಷ್ಟೀಕರಣ ನೀಡಿದ ನಂತರ ಅರ್ಜಿದಾರರು ತಮ್ಮ ಟ್ವೀಟ್‌ ಅಳಿಸಿಹಾಕಿದ್ದಾರೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ತಿಳಿಸಿದ್ದಾರೆ. ಆದ್ದರಿಂದ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು.

ಇದೇ ವೇಳೆ, ಈ ಮಧ್ಯಂತರ ಆದೇಶಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ, ಮಧ್ಯಂತರ ಆದೇಶ ತೆರವಿಗೆ ಕೋರಲು ಅವರು ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣವೇನು?
ಹಾವೇರಿಯಲ್ಲಿ ವಕ್ಫ್‌ ಬೋರ್ಡ್‌ ಭೂಮಿಯನ್ನು ವಶಪಡಿಸಿಕೊಂಡಿರುವುದಕ್ಕೆ ನೊಂದು ರೈತ ರುದ್ರಪ್ಪ ಚನ್ನಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು 2024ರ ನವೆಂಬರ್ 7ರಂದು ಕನ್ನಡ ವೆಬ್‌ಪೋರ್ಟಲ್ ಸುದ್ದಿ ಪ್ರಕಟಿಸಿತ್ತು. ಅದನ್ನು ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದರು.

ಸೂರ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇದೊಂದು ಸುಳ್ಳು ಸುದ್ದಿಯಾಗಿದೆ. ಬೆಳೆ ನಷ್ಟ ಉಂಟಾಗಿದ್ದರಿಂದ ಸಾಲಬಾಧೆಯಿಂದ ರೈತ ರುದ್ರಪ್ಪ ಅವರು 2022ರಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಅಂತಿಮ ವರದಿ ಸಲ್ಲಿಸಲಾಗಿದೆ. ರುದ್ರಪ್ಪ ಸಾವಿಗೂ ವಕ್ಫ್‌ ಬೋರ್ಡ್ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದರು. ಇದಾದ ಬಳಿಕ ತೇಜಸ್ವಿ ಸೂರ್ಯ ಅವರು ಟ್ವೀಟ್ ಅಳಿಸಿ ಹಾಕಿದ್ದರು.

ಈ ಮಧ್ಯೆ, ತೇಜಸ್ವಿ ಸೂರ್ಯ ಹಾಗೂ ಸುದ್ದಿ ಪ್ರಕಟಿಸಿದ್ದ ವೆಬ್‌ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 353(2) ಅಡಿಯಲ್ಲಿ (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುವ ಸುಳ್ಳು ಸುದ್ದಿ ಹರಡಿದ ಆರೋಪ) ಹಾವೇರಿ ಸಿಇಎನ್‌ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದರು. ಇದೀಗ ಎಫ್‌ಐಆರ್ ರದ್ದು ಕೋರಿ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Related Articles

Comments (0)

Leave a Comment