ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಪ್ರವೇಶ ನಿರ್ಬಂಧ; ಜಿಲ್ಲಾಡಳಿತದ ಕ್ರಮ ಎತ್ತಿ ಹಿಡಿದ ಹೈಕೋರ್ಟ್
- by Prashanth Basavapatna
- October 17, 2025
- 41 Views

ಬೆಂಗಳೂರು/ವಿಜಯಪುರ: ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆಂಬ ಹಿನ್ನೆಲೆಯಲ್ಲಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಮೂರು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ವಿಜಯಪುರ ಜಿಲ್ಲಾಧಿಕಾರಿ ಅಕ್ಟೋಬರ್ 16ರಿಂದ ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಶುಕ್ರವಾರ ಪ್ರಕಟಿಸಿತು. ಸ್ವಾಮೀಜಿ ಅವರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ವಿಸ್ತೃತ ತೀರ್ಪು ಇನ್ನಷ್ಟೇ ಪ್ರಕಟವಾಗಬೇಕಿದೆ.
ಸ್ವಾಮೀಜಿ ಸ್ಥಾನಕ್ಕೆ ಶೋಭೆಯಲ್ಲ:
ಗುರುವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಕಾಡಸಿದ್ದೇಶ್ವರ ಸ್ವಾಮೀಜಿ ಬಳಸಿರುವ ಮಾತುಗಳು ಅವರ ಸ್ಥಾನಕ್ಕೆ ಶೋಭೆ ತರುವಂತಹುದಲ್ಲ. ಸ್ವಾಮೀಜಿ ಸಾಮಾನ್ಯರಿಗಿಂತಲೂ ಕೆಳ ಹಂತದ ಭಾಷೆ ಬಳಕೆ ಮಾಡಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿತ್ತಲ್ಲದೆ, ಈಗಾಗಲೇ ಸಮಾಜದಲ್ಲಿ ಅಶಾಂತಿಯ ವಾತಾವರಣ ತಾಂಡವವಾಡುತ್ತಿದೆ. ಅದಾಗ್ಯೂ, ಸ್ವಾಮೀಜಿಯವರ ವಿಜಯಪುರ ಜಿಲ್ಲೆ ಭೇಟಿಗೆ ವಿಧಿಸಿರುವ ನಿರ್ಬಂಧ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಲಿದೆ. ಒಂದು ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂಬುದು ತಿಳಿದು ಬಂದರೆ ಸ್ವಾಮೀಜಿ ಆದಂಥವರು ಅಂತಹ ಕಡೆ ನಾನು ಬರುವುದೇ ಇಲ್ಲ ಎಂದು ಹೇಳುವಲ್ಲಿ ಮೊದಲಿಗರಾಗಬೇಕು ಎಂದು ಹೇಳಿತ್ತು.
ಅರ್ಜಿದಾರ ಸ್ವಾಮೀಜಿ ಪರ ವಾದ ಮಂಡಿಸಿದ್ದ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವುದು ಒಪ್ಪುವಂತಹುದಲ್ಲ. ಆದ್ದರಿಂದ, ಜಿಲ್ಲಾಧಿಕಾರಿಗಳ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.
ಕ್ರಮ ಸಮರ್ಥಿಸಿಕೊಂಡಿದ್ದ ಸರ್ಕಾರ:
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಸ್ವಾಮೀಜಿಯ ಹಿತದೃಷ್ಟಿಯಿಂದಲೇ ಅವರನ್ನು ವಿಜಯಪುರಕ್ಕೆ ಭೇಟಿ ನೀಡದಂತೆ ಪ್ರತಿಬಂಧಿಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯ ಮಾಹಿತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿಸಿಪಿ ಅವರ ವರದಿಗಳನ್ನು ಆಧರಿಸಿಯೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು ಎಂಬ ಕಾರಣಕ್ಕೆ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ. ಕನೇರಿ ಸ್ವಾಮೀಜಿಗಳ ಭಕ್ತರೇ, ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬೇಡ ಎಂದು ಹೇಳುತ್ತಿದ್ದಾರೆ. ಸ್ವಾಮೀಜಿ ಬಸವನಬಾಗೇವಾಡಿಗೆ ತೆರಳುವುದರಿಂದ ಅಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಪ್ರಕರಣವೇನು?
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಪ್ರಸಿದ್ಧ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಇದೇ 7ರಂದು ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಬೀಳೂರು ಗ್ರಾಮದ ಸಮಾರಂಭವೊಂದರಲ್ಲಿ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು, ಕಲಾವಿದರಿಂದ ಕೂಡಿದ ಮುಖ್ಯಮಂತ್ರಿಗಳ ಕೃಪಾಪೋಷಿತ ನಾಟಕ ಮಂಡಳಿ. ಇವರು ಬಸವ ಸಂಸ್ಕೃತಿ ಅಭಿಯಾನ ಎಂಬ ನಾಟಕವನ್ನು ತೆಗೆದುಕೊಂಡು ಕರ್ನಾಟಕದಾದ್ಯಂತ ತಿರುಗಾಡಿ; ದೇವರು ಗುಡ್ಯಾಗ ಇಲ್ಲ. ಗುಡೀಗೆ ಹೋಗಬ್ಯಾಡ್ರಿ, ಮನ್ಯಾಗಿನ ದೇವರುಗಳನ್ನು ತಗೊಂಡು ಹೊಳ್ಯಾಗ ಹಾಕ್ರಿ. ಹೋಟೆಲ್‌ದಾಗ ಹೋಗಿ ದಾರು ಕುಡೀರಿ, ಆರಾಮಾಗಿರಿ, ಮಾಂಸ ತಿನ್ರಿ ಎಂದೆಲ್ಲ ಜನರಿಗೆ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸುವ ಭರದಲ್ಲಿ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರನ್ನು ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶ ನಿರ್ಬಂದಿಸಿ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸ್ವಾಮೀಜಿ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
Related Articles
Thank you for your comment. It is awaiting moderation.
Comments (0)