ಅತ್ಯಾಚಾರ ಸಂತ್ರಸ್ತೆ ಅಪಹರಣ; ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆ ಕಾನೂನು ಪ್ರಕಾರ ಮುಂದುವರಿಯಲಿ – ಹೈಕೋರ್ಟ್
- by Prashanth Basavapatna
- February 26, 2026
- 10 Views
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮುಂದುವರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿದೆ.
ಸಂತ್ರಸ್ತೆಯ ಪುತ್ರ ನೀಡಿದ ದೂರಿನ ಅನ್ವಯ ಮೈಸೂರು ಜಿಲ್ಲೆಯ ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ರದ್ದು ಕೋರಿ ಎಚ್.ಡಿ. ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಸರ್ಕಾರಿ ಅಭೀಯೋಜಕರು, ಪ್ರಕರಣದಲ್ಲಿ ದೋಷಾರೋಪ ಹೊರಿಸುವ ಪ್ರಕ್ರಿಯೆಗೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ 2026ರ ಫೆಬ್ರವರಿ 5ರಂದು ಆದೇಶಿಸಿದೆ. ಈಗಾಗಲೇ ಜನಪ್ರತಿನಿಧಿಗಳವಿಶೇಷ ನ್ಯಾಯಾಲಯ ವಿಚಾರಣೆ ಆರಂಭಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ದೋಷಾರೋಪ ನಿಗದಿ ಪ್ರಕ್ರಿಯೆ ನಡೆಸುವುದಕ್ಕೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಇದರಿಂದ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾನೂನು ಪ್ರಕಾರ ವಿಚಾರಣೆ ಮುಂದುವರಿಸಲಿ ಎಂದು ಸೂಚಿಸಿ, ಅರ್ಜಿ ವಿಚಾರಣೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)