ವೇತನಸಹಿತ ಋತುಚಕ್ರ ರಜೆ; ಸರ್ಕಾರದ ಅಧಿಸೂಚನೆಗೆ ‌ನೀಡಿದ್ದ ತಡೆಯಾಜ್ಞೆ ಹಿಂಪಡೆದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನಸಹಿತ ರಜೆ ನೀಡುವ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಗೆ ತಡೆ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ರಾಜ್ಯ ಸರ್ಕಾರದ ಮನವಿ ಮೇರೆಗೆ ಹಿಂಪಡೆದಿರುವ ಹೈಕೋರ್ಟ್, ಮಧ್ಯಂತರ ಆದೇಶದ ಕುರಿತು ಬುಧವಾರ ವಿಸ್ತೃತವಾಗಿ ವಾದ ಆಲಿಸುವುದಾಗಿ ತಿಳಿಸಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ಬೆಳಗ್ಗೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿಸೂಚನೆಗೆ ತಡೆಯಾಜ್ಞೆ ನೀಡಿತ್ತಲ್ಲದೇ, ಸರ್ಕಾರವು ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಮಧ್ಯಂತರ ಆದೇಶ ಮಾಡಿತ್ತು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಧ್ಯಾಹ್ನ ಭೋಜನ ವಿರಾಮಕ್ಕೂ ಮುನ್ನ ನ್ಯಾಯಪೀಠದ ಮುಂದೆ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು,‌ ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂಕೋರ್ಟ್‌ ಪ್ರಕರಣವೊಂದರಲ್ಲಿ ಆದೇಶ ಮಾಡಿದೆ. ಅದೇ ರೀತಿ ಕಾನೂನು ಆಯೋಗವೂ ಈ ಸಂಬಂಧ ಶಿಫಾರಸು ಮಾಡಿದೆ. ಇದರ ಭಾಗವಾಗಿ ರಾಜ್ಯ ಸರ್ಕಾರಕ್ಕೆ ಸಂವಿಧಾನದ ಪರಿಚ್ಛೇದ 142ರಡಿ ದೊರೆತಿರುವ ಅಧಿಕಾರ ಬಳಸಿ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಅಧಿಸೂಚನೆಯನ್ನು ಕಾನೂನುಬದ್ಧವಾಗಿಯೇ ಹೊರಡಿಸಲಾಗಿದ್ದು, ಸರ್ಕಾರದ ವಾದ ಆಲಿಸಿದೇ ಅಧಿಸೂಚನೆಗೆ ತಡೆ ನೀಡಬಾರದು ಎಂದು ಮನವಿ ಮಾಡಿದರು.

ಇದನ್ನು ಆಲಿಸಿದ ನ್ಯಾಯಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ‌ ಬೆಳಗ್ಗೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹಿಂಪಡೆಯಿತಲ್ಲದೆ, ಬುಧವಾರ ಉಭಯ ಪಕ್ಷಕಾರರ ವಾದ ಆಲಿಸಿ ಮಧ್ಯಂತರ ಆದೇಶದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

ಈ ವೇಳೆ, ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಸೇರಿ ಹಲವು ಮಹಿಳಾ ವಕೀಲರು ನ್ಯಾಯಪೀಠದ ಮುಂದೆ ಹಾಜರಾಗಿದ್ದರು.

Related Articles

Comments (0)

Leave a Comment