ಮುಡಾ ನಿವೇಶನ ಹಂಚಿಕೆ ಹಗರಣ; ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ನವೆಂಬರ್ 2ನೇ ವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್‌ ಎರಡನೇ ವಾರಕ್ಕೆ ಮುಂದೂಡಿದೆ.

ಏಕಸದಸ್ಯ ನ್ಯಾಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳ ಕುರಿತು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಆಗ ನ್ಯಾಯಪೀಠ, ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಆದ್ದರಿಂದ, ನವೆಂಬರ್‌ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಬಹುದೇ ಎಂದು ಕೇಳಿತು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ನವೆಂಬರ್‌ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್‌ ಎರಡನೇ ವಾರಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:
ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2024ರ ಸೆಪ್ಟೆಂಬರ್ 24ರಂದು ಎತ್ತಿಹಿಡಿದಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಮತ್ತೊಂದೆಡೆ, ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ. ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಆದೇಶದಲ್ಲಿ ಏಕಸದಸ್ಯ ನ್ಯಾಯಪೀಠ ವ್ಯಕ್ತಪಡಿಸಿದ್ದ ಕಟು ಅಭಿಪ್ರಾಯಗಳಿಂದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ ಎದುರಿಸುವಂತಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಸಹ ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದಾರೆ.

Related Articles

Comments (0)

Leave a Comment