ಬೆಂಗಳೂರು ಕಂಬಳ ಸ್ಪರ್ಧೆಗೆ ದಿನಾಂಕ ನಿಗದಿಯಾಗಿಲ್ಲ; ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರ್ಕಾರ
- by Jagan Ramesh
- November 5, 2024
- 43 Views
ಬೆಂಗಳೂರು: ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿಯಾಗಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆೆಯ ಪಿಲಿಕುಳದಲ್ಲಿ ನವೆಂಬರ್ 17ರಂದು ಕಂಬಳ ನಡೆಯಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ (ಪೆಟಾ) ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಬೆಂಗಳೂರು ಕಂಬಳ ಸಮಿತಿ ಪರ ವಕೀಲ ಬಿ. ವಿನೋದ್ ಕುಮಾರ್ ಹಾಜರಾಗಿ, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿಯಾಗಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆೆಯ ಪಿಲಿಕುಳದಲ್ಲಿ ಇದೇ 17ರಂದು ಕಂಬಳ ನಡೆಯಲಿದೆ ಎಂದು ನ್ಯಾಯಾಲಯಕ್ಕೆೆ ತಿಳಿಸಿದರು.
ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ನಮಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ, ಪಿಲಿಕುಳದಲ್ಲಿ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ. ಅಷ್ಟೇ ಅಲ್ಲ, ಸ್ವತಃ ಮೃಗಾಲಯ ನಿರ್ದೇಶಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಂಬಳ ನಡೆಯುವ ವೇಳೆ ಉಂಟಾಗುವ ಕೂಗಾಟದಿಂದ ಮೃಗಾಲಯದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ. ನಮ್ಮದೂ ಇದೇ ವಾದವಾಗಿದೆ ಎಂದರು.
ಆಗ ಅಡ್ವೋಕೇಟ್ ಜನರಲ್, ಪಿಲಿಕುಳದಲ್ಲಿ ಕಳೆದ 15-20 ವರ್ಷಗಳಿಂದ ಕಂಬಳ ನಡೆಯುತ್ತಿದೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಮ್ಮ ಆಕ್ಷೇಪವಿಲ್ಲ. ಬೇರೆ ಕಡೆ ಕಂಬಳ ನಡೆಸಲಿ. ಆದರೆ, ಮೃಗಾಯಲಯದ ಸಮೀಪ ಕಂಬಳ ಆಯೋಜನೆಗೆ ನಮ್ಮ ತಕರಾರು ಇದೆ ಎಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಬಗ್ಗೆ ಆಕ್ಷೇಪಣಿಗಳಿದ್ದರೆ ಸಲ್ಲಿಸುವಂತೆ ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.
Comments (0)