ಕೆಂಪೇಗೌಡ ಪ್ರತಿಮೆ ಸ್ಥಳಾಂತರ ಪ್ರಶ್ನಿಸಿದ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
- by LegalSamachar
- September 19, 2025
- 43 Views

ಬೆಂಗಳೂರು: ಮಾಗಡಿ ಪುರಸಭೆ ಆವರಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ತೆರವು ಅಥವಾ ಸ್ಥಳಾಂತರ ಮಾಡದಂತೆ ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಶ್ರೀ ಕೆಂಪೇಗೌಡ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಚ್.ಎಂ. ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಮಾಗಡಿ ತಹಶೀಲ್ದಾರ್, ಮಾಗಡಿ ಪುರಸಭೆ ಮುಖ್ಯಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೆಂಪೇಗೌಡ ಅಭಿವೃದ್ಧಿ ಸಮಿತಿಯ ಕೋರಿಕೆಯಂತೆ ಪುರಸಭೆಯು ಅನುಮತಿ ನೀಡಿ, ಆವರಣದಲ್ಲಿ ಜಾಗ ಕೊಟ್ಟಿದ್ದರಿಂದ 2003ರಲ್ಲಿ ಪ್ರತಿಮೆ ಸ್ಥಾಪಿಸಲಾಗಿತ್ತು. ಇದೀಗ ಯಾವುದೇ ಮುನ್ಸೂಚನೆ, ಚರ್ಚೆ ಇಲ್ಲದೆ ಪುರಸಭೆ ಏಕಾಏಕಿ ಪ್ರತಿಮೆಯ ಸ್ಥಳಾಂತರಕ್ಕೆ ಮುಂದಾಗಿದೆ. ಈ ಹಿಂದೆ ಮಹಾತ್ಮಾ ಗಾಂಧಿ ಪ್ರತಿಮೆ ಸ್ಥಳಾಂತರಿಸಿದ್ದಾಗ ದೊಡ್ಡ ಗಲಾಟೆಯಾಗಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಉಂಟಾಗಿತ್ತು. ಆದ್ದರಿಂದ, ಪ್ರತಿಮೆ ಸ್ಥಳಾಂತರಿಸದಂತೆ ನಿರ್ದೇಶನ ನೀಡಬೇಕು. ಅರ್ಜಿ ಇತ್ಯರ್ಥ ಆಗುವವರೆಗೆ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಬೇಕು ಎಂದು ಕೋರಿದರು.
ನ್ಯಾಯಪೀಠ ಪ್ರತಿಕ್ರಿಯಿಸಿ, ಪ್ರತಿಮೆ ಎಲ್ಲಿ ಇರಬೇಕು, ಎಲ್ಲಿಗೆ ಸ್ಥಳಾಂತರಿಸಬೇಕು ಎನ್ನುವುದು ಪುರಸಭೆಯ ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ಹೇಳಿತಲ್ಲದೆ, ಕೆಂಪೇಗೌಡ ಅವರನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದು ನೀವು ಹೇಳುತ್ತೀರೇ ಎಂದು ವಕೀಲರನ್ನು ಪ್ರಶ್ನಿಸಿತು. ಅದು ಯಾರಿಂದಲೂ ಸಾಧ್ಯವಿಲ್ಲ ಎಂದು ವಕೀಲರು ಉತ್ತರಿಸಿದರು. ಅದಕ್ಕೆ ನ್ಯಾಯಪೀಠ, ಹೌದು! ಕೆಂಪೇಗೌಡರ ವ್ಯಕ್ತಿತ್ವ, ಅವರ ಕೊಡುಗೆ ಎಲ್ಲರಿಗೂ ತಿಳಿದಿದೆ. ಯಾರೊಬ್ಬರೂ ಅವರನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ನುಡಿಯಿತು.
Related Articles
Thank you for your comment. It is awaiting moderation.
Comments (0)