ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಪ್ರಶ್ನಿಸಿ ಪಿಐಎಲ್; ಮಂಗಳವಾರ ವಿಚಾರಣೆ ನಡೆಸಲಿರುವ ಹೈಕೋರ್ಟ್

ಬೆಂಗಳೂರು: ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಬೆಂಗಳೂರು ಕಂಬಳ ಸಮಿತಿ ಆಯೋಜಿಸುತ್ತಿರುವ ಕಂಬಳ (ಕೋಣಗಳ ಓಟ) ಸ್ಪರ್ಧೆಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮಂಗಳವಾರ (ಅಕ್ಟೋಬರ್ 22) ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಪೀಠದ ಮುಂದೆ‌ ಅರ್ಜಿದಾರರಾದ ‘ಪೀಪಲ್ ಫಾರ್ ದ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ)’ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಹಾಜರಾಗಿ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು.

ಆಗ ನ್ಯಾಯಪೀಠ, ಕೊನೇ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರಲಾಗುತ್ತಿದೆ, ಇಷ್ಟು ವಿಳಂಬವೇಕೆ? ಎಂದು ಪ್ರಶ್ನಿಸಿತು. ಅದಕ್ಕುತ್ತರಿಸಿದ ಧ್ಯಾನ್‌ ಚಿನ್ನಪ್ಪ, ಜುಲೈ ತಿಂಗಳಿನಲ್ಲೇ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ನಿಗದಿಯಾಗಿಲ್ಲ. ಇದೀಗ ಅಕ್ಟೋಬರ್‌ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಂಬಳದ ಕೋಣಗಳನ್ನು ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಪಡಿಸಿತು.

ಮನವಿ ಏನು?
ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಬೆಂಗಳೂರಿನಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕೆ ಅನುಮತಿಸದಂತೆ ಪೆಟಾ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಕಾರಣ ಹೈಕೋರ್ಟ್ ಮೆಟ್ಟಿಲೇರಿರುವ ಪೆಟಾ, ದಕ್ಷಿಣ ಕನ್ನಡ ಮತ್ತು ಉಡುಪಿ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯ್ದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದೆ.

Related Articles

Comments (0)

Leave a Comment