ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ; ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ’ ಅಡಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 2ಕ್ಕೆ ಮುಂದೂಡಿದೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿ, ಪ್ರಕರಣ ಸಂಬಂಧ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿರುವುದರಿಂರ ಇಡೀ ಪ್ರಕ್ರಿಯೆ ಸ್ಥಬ್ಧವಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪೋಕ್ಸೊ ಕಾಯ್ದೆಯ ಸೆಕ್ಷನ್‌ 35ರ ಪ್ರಕಾರ ವಿಚಾರಣಾ ನ್ಯಾಯಾಲಯ ಪ್ರಕರಣದ ಸಂಜ್ಞೇ (ಕಾಗ್ನಿಜೆನ್ಸ್) ಪರಿಗಣಿಸಿದ 30 ದಿನಗಳ ಒಳಗೆ ಸಂತ್ರಸ್ತ ಮಗುವಿನ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಕಾಗ್ನಿಜೆನ್ಸ್ ತೆಗೆದುಕೊಂಡ ಬಳಿಕ 6 ತಿಂಗಳಿಂದ ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳ್ಳಬೇಕಿದೆ. ಈ ಪ್ರಕರಣದಲ್ಲಿ ಕಾಗ್ನಿಜೆನ್ಸ್ ತೆಗೆದುಕೊಂಡು ಈಗಾಗಲೇ 6 ತಿಂಗಳಾಗಿದೆ. ಆದ್ದರಿಂದ, ನ್ಯಾಯಾಲಯ ಈ‌ ಹಿಂದೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿದರು.

ಬಿಎಸ್‌ವೈ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ. ನಾಗೇಶ್‌, ಶುಕ್ರವಾರ ಅಥವಾ ಸೋಮವಾರ ಒಂದೇ ಬಾರಿಗೆ ಮಧ್ಯಂತರ ಅರ್ಜಿಗಳೂ ಸೇರಿ ಇಡೀ ಪ್ರಕರಣದ ವಿಚಾರಣೆ ಪೂರ್ಣಗೊಳಿಸಬಹುದು ಎಂದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ಎಲ್ಲ ಪಕ್ಷಗಾರರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿತಲ್ಲದೆ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ವಿಚಾರಣೆಗಾಗಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್‌ 2ಕ್ಕೆ ಮುಂದೂಡಿತು.

Related Articles

Comments (0)

Leave a Comment