ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಸಂತ್ರಸ್ತೆಯ ಸಾಕ್ಷಿ ವಿಳಂಬಕ್ಕೆ ಪ್ರಾಸಿಕ್ಯೂಷನ್ ಆಕ್ಷೇಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಗೆ ಸಾಕ್ಷಿ ನುಡಿಯಲು ವರ್ಷಗಳಿಂದ ಕಾಯುವಂತೆ ಮಾಡಲಾಗಿದೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಹೈಕೋರ್ಟ್‌ ಮುಂದೆ ಆಕ್ಷೇಪ ವ್ಯಕ್ತಪಡಿಸಿದರು.

ಪೋಕ್ಸೊ ಪ್ರಕರಣ ಸಂಬಂಧ ಹೊಸದಾಗಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಬಿ.ಎಸ್‌. ಯಡಿಯೂರಪ್ಪ ಅವರು ಎರಡನೇ ಬಾರಿ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. 2024ರ ಫೆಬ್ರವರಿ 2ರಂದು ಪ್ರಕರಣ ನಡೆದಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ವಿಚಾರಣಾ ನ್ಯಾಯಾಲಯವು ಸಂಜ್ಞೇಯನ್ನೂ ಪರಿಗಣಿಸಿತ್ತು. ಇದನ್ನು ಬಿಎಸ್‌ವೈ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್‌ನ ಸಮನ್ವಯ ಪೀಠವು ವಿಸ್ತೃತವಾಗಿ ಪ್ರಕರಣದ ಮೆರಿಟ್‌ ಒಳಗೊಂಡು ವಾದ ಆಲಿಸಿತ್ತು. ಮೆರಿಟ್‌ ಮೇಲೆ ಬಹುತೇಕ ಅಂಶಗಳನ್ನು ನ್ಯಾಯಾಲಯ ದಾಖಲಿಸಿದೆ. ಆದರೆ, ಸಂಜ್ಞೇ ಪರಿಗಣಿಸಿರುವ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಲೋಪ ಉಲ್ಲೇಖಿಸಿ, ವಿವೇಚನೆ ಬಳಸಿ ಕಾಗ್ನೈಜೆನ್ಸ್ ತೆಗೆದಯಕೊಳ್ಳುವಂತೆ ನಿರ್ದೇಶನ ನೀಡಿತ್ತು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಆನಂತರ, ವಿಚಾರಣಾ ನ್ಯಾಯಾಲಯವು ಹೈಕೋರ್ಟ್‌ನ ಎಲ್ಲ ಅಂಶಗಳನ್ನು ಉಲ್ಲೇಖಿಸಿ ಪ್ರಕರಣ ಕಾಗ್ನೈಜೆನ್ಸ್ ತೆಗೆದುಕೊಂಡಿದೆ. ಈಗ ಮತ್ತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲಾಗಿದ್ದು, ಹೈಕೋರ್ಟ್‌ನಿಂದ ಮಧ್ಯಂತರ ತಡೆಯನ್ನೂ ಪಡೆಯಲಾಗಿದೆ. ಆದ್ದರಿಂದ, ತಡೆಯಾಜ್ಞೆ ಮುಂದುವರಿಸಬಾರದು ಎಂದು ಮನವಿ ಮಾಡಿದರಲ್ಲದೆ, ಪೋಕ್ಸೊ ಪ್ರಕರಣದಲ್ಲಿ ಹೈಕೋರ್ಟ್‌ನ ಸಮನ್ವಯ ಪೀಠದ ನಿರ್ದೇಶನದ ಪ್ರಕಾರ ವಿಚಾರಣಾ ನ್ಯಾಯಾಲಯ ಕಾಗ್ನೈಜೆನ್ಸ್ ತೆಗೆದುಕೊಂಡಿದೆಯೇ ಎಂಬುದಷ್ಟೇ ನಿರ್ಧಾರವಾಗಬೇಕಿದೆ ಎಂದರು.

ಯಡಿಯೂರಪ್ಪ ಪರ ವಕೀಲರು ವಿಚಾರಣೆಯನ್ನು ಒಂದು ವಾರ ಮುಂದೂಡುವಂತೆ ಕೋರಿದರು. ಇದಕ್ಕೆ ಪ್ರಾಸಿಕ್ಯೂಷನ್ ತೀವ್ ಆಕ್ಷೇಪ ವ್ಯಕ್ತಪಡಿಸಿದ್ದರಿಂದ, ಕೊನೆಯ ಬಾರಿಗೆ ಆಗಸ್ಟ್‌ 23ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿತು.

ಏನಿದು ಪ್ರಕರಣ?
ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಸಂತ್ರಸ್ತೆಯ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ನೆರವಾಗುವಂತೆ ಕೋರಲು ಸಂತ್ರಸ್ತೆ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು 2024ರ ಫೆಬ್ರವರಿ 2ರಂದು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ನಮ್ಮ ಜತೆ 9 ನಿಮಿಷ ಮಾತನಾಡಿ, ನಮಗೆ ಟೀ ಕುಡಿಸಿದರು. ಆನಂತರ, ನನ್ನ ಮಗಳನ್ನು ಕೊಠಡಿಗೆ ಕರೆದೊಯ್ದು ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಆಕೆ ಹೊರಹೋಗಲು ಬಾಗಿಲು ತೆರೆಯುವಂತೆ ಒತ್ತಾಯಿಸಿದ್ದಳು. ಆನಂತರ ಯಡಿಯೂರಪ್ಪ ಅವರೇ ಬಾಗಿಲು ತೆರೆದಿದ್ದು, ತಕ್ಷಣ ಓಡಿ ಬಂದ ನನ್ನ ಪುತ್ರಿ ಘಟನೆಯನ್ನು ವಿವರಿಸಿದಳು ಎಂದು ದೂರಲಾಗಿತ್ತು.

ಈ ಕುರಿತು ಯಡಿಯೂರಪ್ಪ ಅವರನ್ನು ಪ್ರಶ್ನಿಸಿದಾಗ, ನಿಮ್ಮ ಮಗಳಿಗೆ ರೇಪ್‌ ಆಗಿದೆಯೋ? ಇಲ್ಲವೋ? ಎಂಬುದನ್ನು ಚೆಕ್‌ ಮಾಡಲು ಹಾಗೆ ಮಾಡಿದೆ ಎಂದರು. ತಕ್ಷಣ ನಮ್ಮ ಕ್ಷಮೆಯಾಚಿಸಿದ ಯಡಿಯೂರಪ್ಪ ಅವರು ನಿಮಗೆ ಮೋಸ ಆಗಿರುವ ಬಗ್ಗೆ ಸಹಾಯ ಮಾಡುತ್ತೇನೆ ಎಂದರು. ಇದಕ್ಕೆ ನಾನು ಒಪ್ಪಲಿಲ್ಲ. ಅದಾಗ್ಯೂ, ಯಡಿಯೂರಪ್ಪ ಅವರು ಈ ವಿಚಾರವನ್ನು ಹೊರೆಗೆ ಬಾಯಿ ಬಿಡದಂತೆ ತಡೆಯಲು ತುಂಬಾ ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸದಾಶಿವನಗರ ಠಾಣೆಗೆ ದೂರಿನಲ್ಲಿ ಆರೋಪಿಸಿದ್ದರು.

ಈ ದೂರು ಆಧರಿಸಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿ (ಲೈಂಗಿಕ ಕಿರುಕುಳ) ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ, ಸಿಐಡಿ ಆರೋಪ ಪಟ್ಟಿ ಸಲ್ಲಿಸಿತ್ತು. ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿತ್ತು. ಈ ಆದೇಶ ರದ್ದುಪಡಿಸಿದ್ದ ಹೈಕೋರ್ಟ್, ಹೊಸದಾಗಿ ಕಾಗ್ನೈಜೆನ್ಸ್ ತೆಗೆದುಕೊಳ್ಳಲು ಆದೇಶಿಸಿತ್ತು. ಇದೀಗ ಮತ್ತೆ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

Related Articles

Comments (0)

Leave a Comment