ಚುನಾವಣೆ ವೇಳೆ ದೇವಾಲಯದಲ್ಲಿ ರಾಜಕೀಯ ಭಾಷಣ ಆರೋಪ; ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
- by Jagan Ramesh
- June 12, 2026
- 18 Views
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸೇರಿ 9 ಮಂದಿ ವಿರುದ್ಧ ಧಾರ್ಮಿಕ ಸ್ಥಳಗಳ (ದುರ್ಬಳಕೆ) ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಮತ್ತದರ ಸಂಬಂಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಆರೋಪಪಟ್ಟಿ ರದ್ದು ಕೋರಿ ಕೆ.ಎಸ್. ಈಶ್ವರಪ್ಪ ಹಾಗೂ ಇತರ 8 ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧದ ಸಕ್ಷಮ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಅರ್ಜಿ ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿತು.
ಈಶ್ವರಪ್ಪ ಪರ ವಾದ ಮಂಡಿಸಿದ್ದ ವಕೀಲ ಲೀಲೇಶ್ ಕೃಷ್ಣ, ದೇವಸ್ಥಾನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಯಾವುದೇ ರಾಜಕೀಯ ಭಾಷಣ ಮಾಡಿಲ್ಲ. ಯಾವ ರಾಜಕೀಯ ಚಟುವಟಿಕೆ ನಡೆಸಲಾಗಿದೆ ಎಂಬುದನ್ನು ದೂರಿನಲ್ಲಿ ವಿವರಿಸಲಾಗಿಲ್ಲ. ಕಾಯ್ದೆ ಅಡಿ ಅಪರಾಧವಾಗುವ ಯಾವುದೇ ಕೃತ್ಯ ನಡೆಸಿಲ್ಲ. 14 ಸಾಕ್ಷಿಗಳ ಪೈಕಿ 13 ಮಂದಿ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಒಬ್ಬರು ಮಾತ್ರ ಪ್ರತ್ಯಕ್ಷದರ್ಶಿಯಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.
ಸರ್ಕಾರದ ಪರ ವಕೀಲರು, ದೇವಸ್ಥಾನದಲ್ಲಿ ಸಭೆ ನಡೆಸಲಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಆದ್ದರಿಂದ, ಧಾರ್ಮಿಕ ಸ್ಥಳಗಳ (ದುರ್ಬಳಕೆ) ತಡೆ ಕಾಯ್ದೆ ಅನ್ವಯವಾಗಲಿದೆ ಎಂದು ವಾದಿಸಿದ್ದರು.
ಪ್ರಕರಣವೇನು?
ಕಳೆದ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಶಿವಮೊಗ್ಗದ ಆದಿ ರಂಗನಾಥ ದೇವಾಲಯದಲ್ಲಿ ಈಶ್ವರಪ್ಪ ಮತ್ತು ಇತರರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಸಭೆ ನಡೆಸಿ ಚರ್ಚಿಸಿದ್ದರು. ಇದರ ಮಾಹಿತಿಯ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಅನ್ವಯ ಈಶ್ವರಪ್ಪ ಸೇರಿ 9 ಮಂದಿ ವಿರುದ್ಧ ಧಾರ್ಮಿಕ ಸಂಸ್ಥೆಗಳ (ದುರ್ಬಳಕೆ ತಡೆ) ಕಾಯ್ದೆಯ ಸೆಕ್ಷನ್ಗಳಾದ 3, 6, ಮತ್ತು 7ರ ಅಡಿ ಪ್ರಕರಣ ದಾಖಲಿಸಲಾಗಿದೆ.
Related Articles
Thank you for your comment. It is awaiting moderation.



Comments (0)