ರೇಣುಕಾಸ್ವಾಮಿ ಕೊಲೆ ಪ್ರಕರಣ; ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಪವಿತ್ರಾ ಗೌಡ ಹಿಂಪಡೆದಿದ್ದಾರೆ.

ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 4 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ನ್ಯಾಯಾಲಯ ಚಾರ್ಜ್‌ಶೀಟ್‌ನಲ್ಲಿರುವ ಅಂಶಗಳನ್ನು ಪರಿಶೀಲಿಸಿ, ತೀರ್ಮಾನಿಸಲಿದೆ. ಆದ್ದರಿಂದ, ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರಕರಣದ 7ನೇ ಆರೋಪಿ ಅನುಕುಮಾರ್ ಸಹ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಆಗ ನ್ಯಾಯಮೂರ್ತಿಗಳು, ನೀವು ಜಾಮೀನು ಅರ್ಜಿ ಸಲ್ಲಿಸಿದ ನಂತರದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರು ಹೇಳುತ್ತಿದ್ದಾರೆ. ನೀವು ಅರ್ಜಿ ಮುಂದುವರಿಸುವಿರಾ ಅಥವಾ ಹಿಂಪಡೆಯುತ್ತೀರಾ? ಈಗಾಗಲೇ ಒಬ್ಬ ಆರೋಪಿ ಅರ್ಜಿ ಹಿಂಪಡೆದಿದ್ದಾರೆ, ನೀವೇನು ಮಾಡುತ್ತೀರಿ? ಎಂದು ಪವಿತ್ರಾ ಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ಅವರನ್ನು ಪ್ರಶ್ನಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣಾ‌ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ ಸಲ್ಲಿಸುವ ಮುನ್ನ ಈ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಈಗ ಆರೋಪಪಟ್ಟಿ ಸಲ್ಲಿಕೆಯಾಗಿರುವ ಕಾರಣ ಸೆಷನ್ಸ್ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಇದರಿಂದ, ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿ ಹಿಂಪಡೆದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊದಲ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೈಶಂಕರ್ ಅವರು ಆಗಸ್ಟ್ 31ರಂದು ವಜಾಗೊಳಿಸಿದ್ದರು. ಇದರಿಂದ, ಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Related Articles

Comments (0)

Leave a Comment