ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಕೆ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸೋನು ನಿಗಮ್
- by Ramya B T
- May 13, 2025
- 31 Views

ಬೆಂಗಳೂರು: ಸಂಗೀತ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ದಾಳಿಗೆ ತಳುಕು ಹಾಕಿ ಮಾತನಾಡಿದ ಆರೋಪದಲ್ಲಿ ದಾಖಲಾಗಿರುವ ದೂರು ಮತ್ತದರ ಸಂಬಂಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸೋನು ನಿಗಮ್ ಸಲ್ಲಿಸಿರುವ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.
ಸೋನು ನಿಗಮ್ ಪರ ಹಾಜರಿದ್ದ ವಕೀಲೆ ಕವಿತಾ ದಾಮೋದರನ್ ವಾದ ಮಂಡಿಸಲು ಮುಂದಾದರು. ಆಗ ನ್ಯಾಯಪೀಠ, ಕಚೇರಿ ಆಕ್ಷೇಪಣೆಗೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲರ ವಾದ ದಾಖಲಿಸಲಾಗಿದ್ದು, ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಲಾಗಿದೆ ಎಂದು ಆದೇಶಿಸಿತು.
ಅರ್ಜಿಯಲ್ಲಿ ದೂರುದಾರರಾದ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ. ಧರ್ಮರಾಜ ಹಾಗೂ ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಪ್ರಕರಣವೇನು?
ಕಳೆದ ಏಪ್ರಿಲ್ 25 ಮತ್ತು 26ರಂದು ಸೋನು ನಿಗಮ್ ಅವರು ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೆಲವರು ಕನ್ನಡ ಹಾಡು ಹಾಡುವಂತೆ ಪದೇಪದೆ ಒತ್ತಾಯಿಸಿದಾಗ ಕೋಪಗೊಂಡ ಸೋನುನಿಗಮ್ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ತಳಕು ಹಾಕಿ ಮಾತನಾಡಿದ್ದಾರೆ. ಕನ್ನಡಿಗರ ಭಾವನೆ ಕೆರಳಿಸುವಂತಹ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ ಎಂದು ಆಕ್ಷೇಪಿಸಿ ಧರ್ಮರಾಜ ಅವರು ಮೇ 2ರಂದು ಆವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಆಧರಿಸಿ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ಗಳಾದ 351 (2) (ಕ್ರಿಮಿನಲ್ ಬೆದರಿಕೆ), 353 (ಸಾರ್ವಜನಿಕವಾಗಿ ಕಿರಿಕಿರಿ ಉಂಟು ಮಾಡುವ ಹೇಳಿಕೆ), 352(1) (ಉದ್ದೇಶಪೂರ್ವಕವಾಗಿ ಅವಮಾನ) ಅಡಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ಮೇ 5ರಂದು ಎಫ್‌ಐಆರ್ ಸಂಬಂಧ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೋನು ನಿಗಮ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.
Comments (0)