ಗ್ರಾ.ಪಂ. ಮೀಸಲಾತಿ ನಿಗದಿಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದ್ದು, ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಅವಧಿ ಮುಗಿದಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆ ನಿರ್ಧರಿಸಲಾಗಿದೆ. ಎಲ್ಲ ಸದಸ್ಯ ಸ್ಥಾನಗಳಿಗೆ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದ್ದು, 30 ದಿನಗಳಲ್ಲಿ ಮೀಸಲಾತಿ ನಿಗದಿಪಡಿಸುವಂತೆ ನಿರ್ದೇಶಿಸಲಾಗಿದೆ. ಈ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಆಲಿಸಿದ ನ್ಯಾಯಪೀಠ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯ್ದೆಯ ಸೆಕ್ಷನ್‌ 5(5)ರ ಅಡಿ ಮೀಸಲಾತಿ ಸಂಬಂಧ 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂಬ ಸರ್ಕಾರದ ವಾದವನ್ನು ದಾಖಲಿಸಿಕೊಂಡು, ಅರ್ಜಿ ವಿಚಾರಣೆಯನ್ನು ಒಂದು ತಿಂಗಳು ಮುಂದೂಡಿತು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೂ ಕಾಲಾವಕಾಶಕ್ಕೆ ಮನವಿ:
ಈ ವೇಳೆ, ಶಿವಮೊಗ್ಗ ನಗರ ಪಾಲಿಕೆ ಚುನಾವಣೆ ನಡೆಸುವಂತೆ ಮಾಜಿ ಉಪಮುಖ್ಯಮಂತ್ರಿ ಪುತ್ರ ಕೆ.ಇ. ಕಾಂತೇಶ್‌ ಸಲ್ಲಿಸಿರುವ ಅರ್ಜಿ ಕುರಿತು ಪ್ರಸ್ತಾಪಿಸಿದ ವಕೀಲ ಎಂ. ವಿನೋದ್‌ ಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆಗೆ 2018ರ ಆಗಸ್ಟ್ 31ರಂದು ಕೊನೆಯ ಬಾರಿಗೆ ಚುನಾವಣೆ ನಡೆದಿದ್ದು, 2023ರಲ್ಲಿ ಅವಧಿ ಮುಗಿದಿದೆ ಎಂದರು.

ಹೆಚ್ಚುವರಿ ಅಡ್ವೋಕೇಟ್ ಜನರಲ್ ಅವರು ನಗರಾಭಿವೃದ್ದಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಅವರ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ವರ್ಷ ಫೆಬ್ರವರಿ ಹಾಗೂ ಏಪ್ರಿಲ್ ತಿಂಗಳ ವಸ್ತುಸ್ಥಿತಿ ವರದಿಯಂತೆ 23 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡವಾರು ಮೀಸಲಾತಿಯನ್ನು ಅಂತಿಮಗೊಳಿಸಲಾಗಿದೆ. 137 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಕರಡು ಮೀಸಲಾತಿ ಹೊರಡಿಸಿ ಅನುಮೋದನೆಗಾಗಿ ಪೌರಾಡಳಿತ ಸಚಿವರಿಗೆ ಹಾಗೂ 4 ನಗರ ಸ್ಥಳೀಯ ಸಂಸ್ಥೆಗಳ ಕರಡು ಮೀಸಲಾತಿಯನ್ನು ನಗರಾಭಿವೃದ್ದಿ ಸಚಿವರಿಗೆ ಕಳಿಸಿಕೊಡಲಾಗಿದೆ. ಆದರೆ, 2026ರ ಮೇ 28ರಂದು ಸಚಿವ ಸಂಪುಟ ವಿಸರ್ಜನೆ ಆಗಿ, ಜೂನ್ 4ಕ್ಕೆ ಹೊಸ ಸಚಿವ ಸಂಪುಟ ರಚನೆಯಾಗಿದೆ. ಈ ಬದಲಾವಣೆ ಹಿನ್ನೆಲೆಯಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ಅಂತಿಮಗೊಳಿಸಲು ಒಂದಿಷ್ಟು ಕಾಲಾವಕಾಶಬೇಕು ಎಂದು ಪ್ರಮಾಣಪತ್ರದಲ್ಲಿ ಕೋರಲಾಗಿದೆ.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.

Related Articles

Comments (0)

Leave a Comment