ಜಿ.ಪಂ-ತಾ.ಪಂ ಗಳಿಗೆ ಮೇ ಅಂತ್ಯದೊಳಗೆ ಮೀಸಲಾತಿ ಪ್ರಕಟಣೆ; ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ವಾಗ್ದಾನ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಮೇ ಅಂತ್ಯದೊಳಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ವಾಗ್ದಾನ ನೀಡಿದೆ. ನ್ಯಾಯಾಲಯಕ್ಕೆ ನೀಡಿರುವ ಭರವಸೆಯಂತೆ ಸರ್ಕಾರ ನಡೆದುಕೊಂಡರೆ, ಸುಮಾರು 4 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿ.ಪಂ-ತಾ.ಪಂ ಚುನಾವಣೆಗಳು 2025ರ ಆಗಸ್ಟ್ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿದ್ದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಮತ್ತೊಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು.

ಈ ಎರಡೂ ಅರ್ಜಿಗಳನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ. ಐ. ಅರುಣ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರ್ಕಾರದ ಮುಚ್ಚಳಿಕೆ ಪರಿಗಣಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಇತ್ಯರ್ಥಪಡಿಸಿತಲ್ಲದೆ, ಮೀಸಲಾತಿ ಪಟ್ಟಿ ನೀಡುವ ಮುಚ್ಚಳಿಕೆಯಂತೆ ಸರ್ಕಾರ ನಡೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿ ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗ ಹೊಂದಿದೆ ಎಂದು ಸ್ಪಷ್ಟಪಡಿಸಿತು.

ಮೇ ಅಂತ್ಯದೊಳಗೆ ಮೀಸಲಾತಿ ಅಧಿಸೂಚನೆ:
ಇದಕ್ಕೂ ಮುನ್ನ ರಾಜ್ಯ ಸರ್ಕಾರದ ಪರ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ಹೆಚ್ಚೆಂದರೆ ಮೇ ಅಂತ್ಯದೊಳಗೆ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗುವುದು. ಈ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಬಹುದಾಗಿದ್ದು, ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಲಾಗುವುದು. ಸರ್ಕಾರ ಮೀಸಲಾತಿ ಪಟ್ಟಿ ಒದಗಿಸಿದ ಬಳಿಕ ಚುನಾವಣಾ ಆಯೋಗವು ಜೂನ್‌/ಜುಲೈ, ಆಗಸ್ಟ್‌ನಲ್ಲಿ ಚುನಾವಣೆ ನಡೆಸಬಹುದು. ಕ್ಷೇತ್ರ ಮರುವಿಂಗಡಣೆಯಾಗದಿದ್ದರಿಂದ ಸರ್ಕಾರದ ವತಿಯಿಂದ ಕಾಲಾವಕಾಶ ಪಡೆಯಲಾಗಿತ್ತು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ ವಾದ ಮಂಡಿಸಿ, ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಮೀಸಲಾತಿ ಪಟ್ಟಿಯನ್ನು ಒದಿಗಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈಗ ಸರ್ಕಾರ ಮೇ ಅಂತ್ಯದ ವೇಳೆಗೆ ಕ್ಷೇತ್ರಗಳ ಮೀಸಲಾತಿ ಪಟ್ಟಿ ಅಧಿಸೂಚನೆ ಪ್ರಕಟಿಸುವ ವಾಗ್ದಾನ ನೀಡಿರುವುದನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು. ಮೀಸಲಾತಿ ಪಟ್ಟಿ ದೊರೆತ ಬಳಿಕ ಆಯೋಗ ಚುನಾವಣೆಯ ದಿನಾಂಕ ನಿಗದಿಪಡಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಮಾಣಪತ್ರ ಸಲ್ಲಿಸಬೇಕು. ನ್ಯಾಯಾಲಯಕ್ಕೆ ನೀಡಿರುವ ವಾಗ್ದಾನದಂತೆ ಸರ್ಕಾರ ನಡೆದುಕೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗಕ್ಕೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

Related Articles

Comments (0)

Leave a Comment