‘ಸಹಕಾರ ಕ್ಷೇತ್ರದಲ್ಲಿ ನಮ್ಮವರು ಅಸ್ತಿತ್ವ ಕಳೆದುಕೊಳ್ಳಬಾರದು’: ಕಾಂಗ್ರೆಸ್ ಕಾರ್ಯಕರ್ತರಿಗೆ ಲಕ್ಷ್ಮಣ ಸವದಿ ಕರೆ
- by Legal Samachar
- November 20, 2026
- 10 Views
ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಸ್ತಿತ್ವ ಕಳೆದುಕೊಳ್ಳಬಾರದು. ಈ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಬಲವಾಗಿ ನೆಲೆಯೂರಲು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವ ಲಕ್ಷ್ಮಣ ಸವದಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಕ್ಷದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಸಹಕಾರ ಘಟಕದ ಅಧ್ಯಕ್ಷ ಸುದರ್ಶನ್ ಜೈನ್, ಶಾಲೆಟ್ ಪಿಂಟೋ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಹಕಾರ ಕ್ಷೇತ್ರ ಸಾಮಾಜಿಕ ಭದ್ರತೆಯ ಬುನಾದಿ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಮಾತನಾಡಿ, ಸಹಕಾರ ಕ್ಷೇತ್ರವು ಸಾಮಾಜಿಕ ಭದ್ರತೆಯ ಬುನಾದಿಯಾಗಿದೆ. ಸಹಕಾರ ಇಲಾಖೆಯಲ್ಲಿ ಪರಿವರ್ತನೆ ತರಲು ಸಚಿವ ಲಕ್ಷ್ಮಣ ಸವದಿ ಪ್ರಯತ್ನಿಸುತ್ತಿದ್ದು, ಅವರ ಪ್ರಯತ್ನಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲವಾಗಿ ನಿಂತಿದೆ. ಸವದಿ ಅವರ ರಾಜಕೀಯ ಅನುಭವದಿಂದ ರಾಜ್ಯದ ಸಹಕಾರ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ಪಕ್ಷದ ಕಾರ್ಯಕರ್ತರಿಗೆ ಹುದ್ದೆ ಸಿಗಬೇಕು
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಸಹಕಾರ ಕ್ಷೇತ್ರವನ್ನು ಪಕ್ಷಾತೀತವಾಗಿ ಉಳಿಸಬೇಕಾಗಿದೆ. ಆದರೆ ರಾಜಕೀಯ ಪಕ್ಷಗಳ ನಡುವಿನ ಪೈಪೋಟಿಯಿಂದಾಗಿ ಈ ಕ್ಷೇತ್ರದಲ್ಲೂ ರಾಜಕೀಯ ಪ್ರಭಾವ ಹೆಚ್ಚಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಸಹಕಾರ ಕ್ಷೇತ್ರದ ಬಹುತೇಕ ಹುದ್ದೆಗಳು ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಪಾಲಾಗುತ್ತಿವೆ. ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸಬಾರದು. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಸಹಕಾರ ಕ್ಷೇತ್ರದ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಶಕ್ತಿಯಾಗಿ ನಿಲ್ಲಬೇಕು ಎಂದು ಹೇಳಿದರು.

ಗ್ರಾಮೀಣ ಮಟ್ಟದಿಂದ ಸಹಕಾರ ಕ್ಷೇತ್ರ ಬಲವರ್ಧನೆ
ಸಚಿವ ಲಕ್ಷ್ಮಣ ಸವದಿ ಮಾತನಾಡಿ, ಈ ಹಿಂದೆ ಸಹಕಾರ ಸಚಿವನಾಗಿದ್ದಾಗ ಕೈಗೊಂಡ ಉತ್ತಮ ಕೆಲಸಗಳನ್ನು ಮುಂದುವರಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಸಂಪುಟದಲ್ಲಿ ಸಹಕಾರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರೀಕ್ಷೆ ಹಾಗೂ ಪಕ್ಷ ನನ್ನ ಮೇಲಿಟ್ಟಿರುವ ಭರವಸೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದೇನೆ ಎಂದರು.

ಗ್ರಾಮೀಣ ಪ್ರದೇಶದಿಂದಲೇ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ. ಈ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸಹಕಾರ ವಿಭಾಗದ ಮುಖಂಡರು ಮತ್ತು ಕಾರ್ಯಕರ್ತರ ಸಲಹೆಗಳನ್ನು ಬಯಸುತ್ತೇನೆ ಎಂದು ತಿಳಿಸಿದರು.
ಸಹಕಾರ ಸಂಘಗಳ ಸದಸ್ಯರು ಸಭೆಗಳಲ್ಲಿ ಕನಿಷ್ಠ ಹಾಜರಾತಿ ಹೊಂದಿರುವುದರ ಜತೆಗೆ ನಿಯಮದಂತೆ ಕನಿಷ್ಠ ವಹಿವಾಟನ್ನೂ ನಡೆಸಬೇಕು. ಕಾರ್ಯಕರ್ತರು ಈ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಹಕಾರ ಸಂಘಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಸ್ತಿತ್ವ ಮತ್ತು ಪ್ರಭಾವವನ್ನು ಬಲಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


Comments (0)