ಸಿಎಂ ಸಿದ್ದರಾಮಯ್ಯಗೆ ಎದುರಾಯ್ತು ಮುಡಾ ಸಂಕಷ್ಟ; ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಗವರ್ನರ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶ ಪತ್ರವನ್ನು ಶನಿವಾರ ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರವಾನಿಸಲಾಗಿದ್ದು, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ರಾಜ್ಯಪಾಲರ ಕಚೇರಿಯಿಂದ ಮುಖ್ಯ‌ ಕಾರ್ಯದರ್ಶಿಗೆ ಕಳುಹಿಸಿರುವ ಆದೇಶ ಪತ್ರ

ರಾಜ್ಯಪಾಲರ ಆದೇಶದ ಸಾರಾಂಶ:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಟಿ.ಜೆ. ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್.ಪಿ. ಪ್ರದೀಪ್ ಎಂಬುವರಿಂದ ಮೂರು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಜುಲೈ 26ರಂದು ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿನ್ ಜಾರಿಗೊಳಿಸಿ, ನಿಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಏಕೆ ಅನುಮತಿ ನೀಡಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಸೂಚಿಸಲಾಗಿತ್ತು.‌ ನೋಟಿಸ್ ಗೆ ಆ.3ರಂದು ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದರು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಆ. 1ರಂದು ಸಂಪುಟ ಸಭೆ ಕರೆದಿದ್ದರು. ಅಲ್ಲಿ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಹಾಗೂ ಪ್ರಾಸಿಕ್ಯೂಷನ್ ಅನುಮತಿ ಕೋರಿದ ಅರ್ಜಿಗಳನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ನಿರ್ಣಯ ತೆಗೆದುಕೊಂಡಿರುವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ನೇಮಕಗೊಂಡಿರುವ ಸಹೋದ್ಯೊಗಿಗಳಾಗಿದ್ದಾರೆ. ಇನ್ನು ಸಿಎಂ ವಿರುದ್ಧವೇ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದೆ. ಹೀಗಿರುವಾಗ ಸಚಿವ ಸಂಪುಟದ ನಿರ್ಣಯ ವಿಶ್ವಾಸಾರ್ಹವಲ್ಲ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.

ವಿಶೇಷ ಸಂಧರ್ಭದಲ್ಲಿ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಬಹುದಾಗಿದೆ ಎಂದು ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಹಾಗೂ ಮಧ್ಯಪ್ರದೇಶ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹೇಳಿದೆ. ಒಂದು ವೇಳೆ ರಾಜ್ಯಪಾಲರಿಗೆ ವಿವೇಚನಾಧಿಕಾರ ಬಳಸಿ ಸ್ವಂತ ನಿರ್ಣಯ ತೆಗೆದುಕೊಳ್ಳಲು ಅವಕಾಶ ನೀಡದೇ ಹೋದರೆ,‌ ಅಲ್ಲಿ ನೆಲದ ಕಾನೂನು ಸಂಪೂರ್ಣ ಕುಸಿಯುತ್ತದೆ. ‌ಮೇಲ್ನೊಟಕ್ಕೆ ಆರೋಪಗಳನ್ನು ತೋರಿಸುವ ದಾಖಲೆಗಳು ಲಭ್ಯವಿದ್ದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸಿದರೆ ಅಥವಾ ತಡೆಹಿಡಿದರೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಒದಗುತ್ತದೆ. ಇದು ಅಧಿಕಾರದಲ್ಲಿರುವವರಿಗೆ ಕಾನೂನು ಉಲ್ಲಂಘಿಸಲು ದಾರಿ ಮಾಡಿಕೊಟ್ಟಂತಾಗಲಿದೆ ಎಂದು ಗೆಹಲೋತ್ ಹೇಳಿದ್ದಾರೆ.

ಶುಕ್ರವಾರವೇ ಆದೇಶಕ್ಕೆ ಸಹಿ ಮಾಡಿರುವ ರಾಜ್ಯಪಾಲರು

ಪ್ರಕರಣದ ದೂರು ಮತ್ತದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಗಮನಿಸಿದರೆ, ತಟಸ್ಥ, ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯುವ ಅಗತ್ಯವಿದೆ. ಅಪರಾಧ ನಡೆದಿರುವ ಬಗ್ಗೆ ಆರೋಪಗಳನ್ನು ಪುಷ್ಟೀಕರಿಸುವ ದಾಖಲೆಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಸೆಕ್ಷನ್ 17ಎ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ -2023ರ ಸೆಕ್ಷನ್ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗುತ್ತಿದೆ ಎಂದು ರಾಜ್ಯಪಾಲರ ಆದೇಶದಲ್ಲಿ ಹೇಳಲಾಗಿದೆ.

Related Articles

Comments (0)

Leave a Comment