ಸಿಎಂ ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು; ವಿಚಾರಣೆ ಮುಂದೂಡಿದ ವಿಶೇಷ ನ್ಯಾಯಾಲಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಪತ್ನಿ ಬಿ.ಎಂ. ಪಾರ್ವತಿ ಸೇರಿ ಹಲವರ ವಿರುದ್ಧ ಸಲ್ಲಿಕೆಯಾಗಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದಾಖಲಿಸಿರುವ ಖಾಸಗಿ ದೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರ ಟಿ.ಜೆ. ಅಬ್ರಹಾಂ, ಆಗಸ್ಟ್ 19ರಂದು ಹೈಕೋರ್ಟ್‌ ಮಾಡಿರುವ ಮಧ್ಯಂತರ ಆದೇಶ ಕುರಿತ ಮೆಮೋ ಸಲ್ಲಿಸಿ, ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಅದನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.

ಮತ್ತೊಂದು ಪ್ರಕರಣ ಸೆಪ್ಟಂಬರ್ 2ಕ್ಕೆ ನಿಗದಿ:
ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಪರಿಗಣಿಸುವುದಕ್ಕೆ ಸಂಬಂಧಿಸಿದ ಆದೇಶವನ್ನು ಆಗಸ್ಟ್ 20ರಂದು ಪ್ರಕಟಿಸುವುದಾಗಿ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿತ್ತು. ಆದರೆ, ಆಗಸ್ಟ್ 19ರಂದು ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಪ್ರಕರಣವನ್ನು ಸೆಪ್ಟೆಂಬರ್ 2ಕ್ಕೆ ನಿಗದಿಪಡಿಸಿದೆ.

ಪ್ರಕ್ರಿಯೆ ಮುಂದೂಡಲು ಆದೇಶಿಸಿದ್ದ ಹೈಕೋರ್ಟ್:
ಮುಡಾ ಹಗರಣಕ್ಕೆ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿದ್ದು, ವಾದ-ಪ್ರತಿವಾದ ಇನ್ನಷ್ಟೇ ಪೂರ್ಣಗೊಳ್ಳಬೇಕಿದೆ. ಇಂತಹ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯ ಯಾವುದೇ ಆದೇಶ ಹೊರಡಿಸಿದರೆ ಅದರಿಂದ ಹೈಕೋರ್ಟ್ ವಿಚಾರಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಆದ್ದರಿಂದ, ಅರ್ಜಿಯ ಮುಂದಿನ ವಿಚಾರಣಾ ದಿನಾಂಕ ಅಂದರೆ ಆಗಸ್ಟ್ 29ರವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನ್ನ ಪ್ರಕ್ರಿಯೆಯನ್ನು ಮುಂದೂಡಬೇಕು. ಮುಂದಿನ ವಿಚಾರಣೆವರೆಗೆ ಪ್ರಕರಣ ಸಂಬಂಧ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

Related Articles

Comments (0)

Leave a Comment