- ಟ್ರಯಲ್ ಕೋರ್ಟ್
- Like this post: 8
ಬಿಜೆಪಿ ಶಾಸಕ ಶ್ರೀವತ್ಸ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಮಧ್ಯಂತರ ಜಾಮೀನು
- by LegalSamachar
- September 20, 2025
- 152 Views

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸುವುದಕ್ಕೆ ಸಂಬಂಧಿಸಿದ ವಿಚಾರದಲ್ಲಿ ಕುರುಬ ಸಮುದಾಯದ ವಿರುದ್ಧ ಎಸ್‌ಟಿ ಹಾಗೂ ವಾಲ್ಮೀಕಿ ಸಮುದಾಯವನ್ನು ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಛಲವಾದಿ ನಾರಾಯಣಸ್ವಾಮಿ ಹಾಗೂ ಟಿ.ಎಸ್. ಶ್ರೀವತ್ಸ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶನಿವಾರ ಪುರಸ್ಕರಿಸಿದ್ದಾರೆ.
ಕೋರ್ಟ್ ಆದೇಶವೇನು?
ಅರ್ಜಿ ಕುರಿತು ವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಬ್ಬ ವ್ಯಕ್ತಿಗೆ ತನ್ನ ಮೂಲಭೂತ ಹಕ್ಕಿನ ಉಲ್ಲಂಘನೆಯಾದರೆ, ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರದೆಯೇ ನೀತಿ ನಿರ್ಧಾರವನ್ನು ಶಾಂತಿಯುತ ರೀತಿಯಲ್ಲಿ ವಿರೋಧಿಸುವ ಹಕ್ಕನ್ನು ನೀಡಲಾಗಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಂತದಲ್ಲಿ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಅರ್ಜಿದಾರರ ವಿರುದ್ಧ ಜೀವಾವಧಿ ಮತ್ತು ಮರಣದಂಡನೆ ಶಿಕ್ಷೆ ವಿಧಿಸುವಂತಹ ಅಪರಾಧವೆಸಗಿದ ಆರೋಪಗಳಿಲ್ಲ. ದೂರಿನಲ್ಲಿ ಮಾಡಲಾದ ಆರೋಪಗಳು ಸಂಪೂರ್ಣವಾಗಿ ಊಹಾಪೋಹಗಳನ್ನು ಆಧರಿಸಿವೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆ ನೀಡುವುದು ಸೂಕ್ತವೆಂದು ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಅರ್ಜಿದಾರರನ್ನು ಬಂಧಿಸಿದ ಸಂದರ್ಭದಲ್ಲಿ ಅವರಿಂದ ತಲಾ 1 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ಪಡೆದು ಬಿಡುಗಡೆ ಮಾಡಬೇಕು ಎಂದು ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಲಯ, ಅರ್ಜಿದಾರರು ಇಂಥದೇ ಕೃತ್ಯದಲ್ಲಿ ಪಾಲ್ಗೊಳ್ಳಬಾರದು, ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಬೆದರಿಸುವುದಾಗಲಿ, ನಾಶಪಡಿಸುವುದಾಗಲಿ, ಸಾಕ್ಷಿಗಳ ನೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವುದಾಗಲಿ ಮಾಡಬಾರದು. 15 ದಿನಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ, ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರ ವಾದವೇನು?
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಈ ಪ್ರಕರಣದಲ್ಲಿ ಅರ್ಜಿದಾರರು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ರೀತಿಯ ಹೇಳಿಕೆ ನೀಡಿರದ ಕಾರಣ ಇಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 353(2) (ಧರ್ಮ, ಜಾತಿ, ಸಮುದಾಯ, ಭಾಷೆಯ ಆಧಾರದಲ್ಲಿ ದ್ವೇಷ ಮೂಡಿಸುವುದು) ಅನ್ವಯಿಸುವುದಿಲ್ಲ. ಶಾಸಕಾಂಗದ ಜವಾಬ್ದಾರಿಯುತ ಸದಸ್ಯರಾಗಿ, ಅರ್ಜಿದಾರರು ತಮ್ಮ ಕಳಕಳಿ ವ್ಯಕ್ತಪಡಿಸಿದ್ದರು. ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಅವರ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ಆಕ್ಷೇಪಿಸಿದ್ದರಲ್ಲದೆ, ಇಮ್ರಾನ್ ಪ್ರತಾಪಗಢಿ ಹಾಗೂ ಗುಜರಾತ್ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ, ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದರು.
ಪ್ರಕರಣವೇನು?
ಕರ್ನಾಟಕ ಪ್ರದೇಶ ಕುರುಬರ ಎಸ್‍ಟಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ನೀಡಿದ ದೂರಿನ ಮೇರೆಗೆ ಛಲವಾದಿ ನಾರಾಯಣಸ್ವಾಮಿ ಹಾಗೂ ಶ್ರೀವತ್ಸ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹಾಗೂ ಬೆಂಗಳೂರು, ಮೈಸೂರಿನಲ್ಲಿ ಶ್ರೀವತ್ಸ ಅವರು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳನ್ನು ಟೀಕಿಸುವ ಭರದಲ್ಲಿ ಇಡೀ ಕುರುಬ ಸಮಾಜಕ್ಕೆ ಅವಮಾನ ಹಾಗೂ ದೌರ್ಜನ್ಯ ಎಸಗಿದ್ದಾರೆ. ಎಸ್‌ಟಿ ಹಾಗೂ ವಾಲ್ಮೀಕಿ ಸಮಾಜದವರು ಕುರುಬ ಸಮಾಜದ ಮೇಲೆ ದಂಗೆ ಎಳೆಬೇಕು ಎನ್ನುವ ರೀತಿಯಲ್ಲಿ ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದಾರೆ. ಸಮುದಾಯದ ಜನರನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಿದ್ದಣ್ಣ ತೇಜಿ ದೂರು ನೀಡಿದ್ದರು.
Related Articles
Thank you for your comment. It is awaiting moderation.
Comments (0)